ಕೊಪ್ಪಳಜಿಲ್ಲಾ ಸುದ್ದಿಗಳು

ಜನರ ಅಹವಾಲುಗಳಿಗೆ ಶೀಘ್ರ ಪರಿಹಾರ ನೀಡಿ – ಜಿಲ್ಲಾಧಿಕಾರಿ ನಲಿನ್ ಅತುಲ್

ಕೊಪ್ಪಳ: ಜನಸ್ಪಂದನದಲ್ಲಿ ಬರುವ ಜನರ ಅಹವಾಲುಗಳಿಗೆ ಶೀಘ್ರದಲ್ಲಿಯೇ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ನಿರ್ದೇಶನದನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಸ್ಯೆಗಳಿಗೆ ತ್ವರಿತ ಪರಿಹಾರದ ಜೊತೆಗೆ ಜನರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸಲು ಈ ಕಾರ್ಯಕ್ರಮದಿಂದ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ ಪ್ರತಿ ತಿಂಗಳು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈಗಾಗಲೇ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಲು ಕ್ರಮ ವಹಿಸಲಾಗುತ್ತಿದೆ. ಪ್ರಸ್ತುತ ಹೋಬಳಿ ಮಟ್ಟದಲ್ಲಿಯೂ ಜನಸ್ಪಂದನಾ ಏರ್ಪಡಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಲು ಅನುಕೂಲವಾಗುತ್ತಿದೆ. ಜಿಲ್ಲೆಯಲ್ಲಿ ಈ ವರೆಗೆ ಜರುಗಿದ ವಿವಿಧ ಜನಸ್ಪಂದನ ಕಾರ್ಯಕ್ರಮಗಳಲ್ಲಿ 2197 ಕುಂದುಕೊರತೆಗಳ ಅರ್ಜಿಗಳು ಹಾಗೂ 347 ಮನವಿಗಳು ಸೇರಿ ಒಟ್ಟು 2544 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ 2145 ಕುಂದುಕೊರತೆಗಳ ಅರ್ಜಿಗಳನ್ನು ಮತ್ತು 346 ಮನವಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ 53 ಕುಂದುಕೊರತೆಗಳ ಅರ್ಜಿಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದರು.

*ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ:* ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮಗಳಾದ ಐದು ಗ್ಯಾರಂಟಿ ಯೋಜನೆಗಳು ಕೊಪ್ಪಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅನ್ನಭಾಗ್ಯ ಯೋಜನೆಯಡಿ ವೆಂಕಟಗಿರಿ ಗ್ರಾಮದ 12,417 ಜನರು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 11,84,059 ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಬದಲಿಗೆ ಪ್ರತಿ ಸದಸ್ಯರಿಗೆ 170 ರೂ. ನೇರ ನಗದು ವರ್ಗಾವಣೆ ಮೂಲಕ (ಡಿ.ಬಿ.ಟಿ) ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ ವೆಂಕಟಗಿರಿಯ 8628 ವಿದ್ಯುತ್ ಗ್ರಾಹಕರಲ್ಲಿ 5800 ಜನರಿಗೆ ಈ ಯೋಜನೆಯ ಲಾಭ ದೊರೆತಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 2,77,000 ಕ್ಕೂ ಅಧಿಕ ಗ್ರಾಹಕರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 14,447 ಪದವಿ ಹಾಗೂ ಡಿಪ್ಲೋಮಾ ಓದಿದ ಅಭ್ಯರ್ಥಿಗಳಿಗೆ ರೂ. 4.28 ಕೋಟಿ ರೂ.ಗಳ ನಿರುದ್ಯೋಗ ಭತ್ಯೆಯನ್ನು ಪಾವತಿ ಮಾಡಲಾಗಿದ್ದು, ಇದರಲ್ಲಿ ಗಂಗಾವತಿ ತಾಲೂಕಿನ 5131 ಅಭ್ಯರ್ಥಿಗಳಿಗೆ ಈ ಯೋಜನೆಯ ಲಾಭ ಸಿಕ್ಕಿದೆ. ಗೃಹಲಕ್ಷೀ ಯೋಜನೆಯಡಿ ಜಿಲ್ಲೆಯ 3,21,500 ಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಮಾಹೆಯಾನ ರೂ.2000 ರಂತೆ ಸಹಾಯಧನ ಸೌಲಭ್ಯ ಪಡೆದುಕೊಂಡಿದ್ದು, ವೆಂಕಟಗಿರಿ ಹೋಬಳಿಯಲ್ಲಿ 11 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಈ ಯೋಜನೆಯಿಂದ ಅನುಕೂಲವಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ತಿಂಗಳು ಸುಮಾರು 35 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಮಹಿಳೆಯರಿಗೆ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಹಿರೇಬೆಣಕಲ್ ಗ್ರಾಮದ ಮೋರೆರ ಬೆಟ್ಟವು ವಿಶ್ವ ಪಾರಂಪರಿಕ ತಾಣದ ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ ಹಾಗೂ ಇಟಗಿಯಲ್ಲಿರುವ ಮಹಾದೇವ ದೇವಾಲಯನ್ನು ಸಹ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅಂಜನಾದ್ರಿ ಬೆಟ್ಟ, ಪಂಪಾ ಸರೋವರ ಸೇರಿದಂತೆ ಜಿಲ್ಲೆಯ ಇತರ ಐತಿಹಾಸಿಕ ಸ್ಥಳಗಳಿಗೆ ದೇಶ ಹಾಗೂ ವಿದೇಶಗಳಿಂದ ಪ್ರವಾಸಿಗರು ನಮ್ಮ ಜಿಲ್ಲೆಗೆ ಆಗಮಿಸುತ್ತಾರೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನವಿದ್ದು, ಈ ಅನುದಾನದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಇದರಿಂದ ಈ ಭಾಗವು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದರ ಜೊತೆಗೆ ಜನರಿಗೆ ಉದ್ಯೋಗವಕಾಶಗಳು ದೊರೆಯಲಿವೆ ಎಂದರು.

*ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಅರ್ಜಿ ಹಾಗೂ ಮನವಿಗಳ ಸಲ್ಲಿಕೆ:* ವೆಂಕಟಗಿರಿ ಹಾಗೂ ಸುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರು ಬೆಳೆ ಪರಿಹಾರ, ಮಾಸಾಶನ, ಜಮೀನು ವರ್ಗಾವಣೆ, ಪೌತಿ ಖಾತೆ, ಪಹಣಿ ತಿದ್ದುಪಡಿ, ಮೌರ್ಯರ ಬೆಟ್ಟಕ್ಕೆ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಕಲ್ಪಿಸುವುದು, ಗಡ್ಡಿ ಗ್ರಾಮದ ಕರೆಯ ಹೂಳೆತ್ತುವುದು ಮತ್ತು ತುಂಗಭದ್ರಾ ನದಿಯಿಂದ ಕರೆಗೆ ನೀರು ತುಂಬಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಅರ್ಜಿಗಳನ್ನು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಪಿಂಚಣಿ ಸೌಲಭ್ಯ ಸೇರಿದಂತೆ ಕೆಲವೊಂದನ್ನು ಅಹವಾಲುಗಳಿಗೆ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಪರಿಹರಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

*ವಿವಿಧ ಇಲಾಖೆಗಳ ಕೌಂಟರ್ ಸ್ಥಾಪನೆ:* ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಕೌಂಟರ್ ಸ್ಥಾಪಿಸಿ, ಜಿಲ್ಲಾಡಳಿತದಿಂದ ಇಲಾಖಾವಾರು ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರತ್ಯೇಕ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿತ್ತು.

ಇದೇ ಸಂದರ್ಭದಲ್ಲಿ ವಿಮಾ ಪರಿಹಾರ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು. ವೆಂಕಟಗಿರಿ ಗ್ರಾಮದ ಜನಸ್ಪಂದನ ಕಾರ್ಯಕ್ರಮದಲ್ಲಿ 173 ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡವು. ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಮತ್ತು ಸಮಸ್ಯಾತ್ಮಕ ಅರ್ಜಿಗಳಿದ್ದರೆ ಸೂಕ್ತ ಹಿಂಬರಹ ನೀಡಬೇಕು. ಆದರೆ, ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ವೆಂಕಟಗಿರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಕ್ಕಮ್ಮ ಪರಸ್ಪರ ಕಂದಕೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಗ್ರಾ.ಪಂ ಉಪಾಧ್ಯಕ್ಷರಾದ ಹುಲಿಗೆಮ್ಮ ತುರುಪತೆಪ್ಪ ಕುರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಗಂಗಾವತಿ ತಹಸೀಲ್ದಾರ ಯು.ನಾಗರಾಜ್, ತಾಪಂ ಇಓ ಲಕ್ಷ್ಮೀದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button