
ಕೊಪ್ಪಳ, ಆ. 1: ನಗರದ ಲೇಬರ್ ಸರ್ಕಲ್‌ನಲ್ಲಿ ಇಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತರನ್ನು ಶಿರಾಳಕೊಪ್ಪ ಮೂಲದ ರಾಜು ಕೊರವರ್ (28) ಎಂದು ಗುರುತಿಸಲಾಗಿದೆ. ಬನ್ನಿಕಟ್ಟಿ ಕಡೆಯಿಂದ ಅತಿವೇಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ, ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ ಗಾಳಿಗೆ ಎಸೆಯಲ್ಪಟ್ಟು, ಎದುರಿನಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅತಿವೇಗದ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ 
ಕೊಪ್ಪಳ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಅತಿವೇಗ ಹಾಗೂ ಅಪಾಯಕಾರಿ ರೀತಿಯಲ್ಲಿ ಬೈಕ್ ಚಲಾಯಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಂಗ್ ರೂಟ್‌ನಲ್ಲಿ ಸಂಚಾರ, ನಿಯಂತ್ರಣವಿಲ್ಲದ ವೇಗ ಹಾಗೂ ನಿಯಮ ಉಲ್ಲಂಘನೆಯ ಘಟನೆಗಳು ಹೆಚ್ಚಾಗುತ್ತಿದ್ದು, ಇಂತಹವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬರುತ್ತಿದೆ.




