

ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅಗತ್ಯ: ಅಮರೇಶ್ ಹಾವೀನ್
ಪೋಷಣ್ ಅಭಿಯಾನ್ ಮಾಸಾಚರಣೆಗೆ ಚಾಲನೆ
ಕುಕನೂರು: ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಂತ ಅಗತ್ಯವಾಗಿದ್ದು, ಅಪೌಷ್ಟಿಕತೆಯನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬದಲ್ಲಿಯೂ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಪ್ಪಳ ಜಿಲ್ಲಾ ಉಪನಿರ್ದೇಶಕ ಅಮರೇಶ್ ಹಾವೀನ್ ಹೇಳಿದರು.
ಕುಕನೂರು ಪಟ್ಟಣದ ಶ್ರೀ ಅನ್ನದಾನೇಶ್ವರ ಶಾಖಾಮಠದಲ್ಲಿ ಅ.3, 2026ರಂದು ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಅಭಿಯಾನ್ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಅಗತ್ಯವಾದ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕಾಂಶದ ಕುರಿತು ಸೂಕ್ತ ಮಾಹಿತಿ ನೀಡಲಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದಲ್ಲಿ ಆರಂಭಿಕ ಹಂತದಲ್ಲಿಯೇ ಗುರುತಿಸಿ ಅಗತ್ಯ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪೋಷಣ್ ಅಭಿಯಾನವು ಕೇವಲ ಒಂದು ತಿಂಗಳಿಗೆ ಸೀಮಿತವಾಗದೆ, ಪ್ರತಿಯೊಂದು ಕುಟುಂಬದಲ್ಲಿಯೂ ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಶಾಶ್ವತ ಜಾಗೃತಿ ಮೂಡಿಸುವ ಅಭಿಯಾನವಾಗಬೇಕು. ಸಾರ್ವಜನಿಕರು, ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಅಪೌಷ್ಟಿಕತೆ ನಿರ್ಮೂಲನೆ ಸಾಧ್ಯ ಎಂದು ಹೇಳಿದರು.
ಜಿಲ್ಲಾ ನ್ಯೂಡಲ್ ಅಧಿಕಾರಿ ಅಕ್ಕಮಹಾದೇವಿ ಮಾತನಾಡಿ, ಪ್ರತಿಯೊಂದು ಅಂಗನವಾಡಿ ಕೇಂದ್ರವೂ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುವಂತಾಗಬೇಕು. ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ವೈದ್ಯಾಧಿಕಾರಿ ಭಾವನ ಹರಪನಹಳ್ಳಿ ಮಾತನಾಡಿ, ಮಕ್ಕಳ ಉತ್ತಮ ಆರೋಗ್ಯ ಮತ್ತು ಸಮಗ್ರ ಬೆಳವಣಿಗೆಗೆ ಪೌಷ್ಟಿಕ ಆಹಾರ ಅಗತ್ಯ. ತಾಯಂದಿರು ಮಕ್ಕಳಿಗೆ ಆರು ತಿಂಗಳವರೆಗೆ ಎದೆಹಾಲು ನೀಡಬೇಕು. ನಂತರ ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶಯುಕ್ತ ಪೂರಕ ಆಹಾರ ನೀಡಬೇಕು. ಶುದ್ಧ ಕುಡಿಯುವ ನೀರು, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಮಾತನಾಡಿ, ಪ್ರತಿಯೊಂದು ಮಗುವಿಗೂ ಸಮರ್ಪಕ ಪೌಷ್ಟಿಕ ಆಹಾರ ಹಾಗೂ ಉತ್ತಮ ಆರೋಗ್ಯ ಒದಗಿಸುವುದು ಪೋಷಣ್ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಮಕ್ಕಳ ಬೆಳವಣಿಗೆ ಹಾಗೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದರು.
ನಿರೂಪಣಾಧಿಕಾರಿ ಹಾಗೂ ಜಂಟಿ ನಿರ್ದೇಶಕ ನಟರಾಜ ಅವರು ಪೋಷಣ್ ಅಭಿಯಾನದ ಉದ್ದೇಶ ಹಾಗೂ ಯೋಜನೆಗಳ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಶ್ರೀಮಂತ ಕಾರ್ಯಕ್ರಮ ಹಾಗೂ ಪುಟ್ಟ ಕಂದಮ್ಮನಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಸಲಾಯಿತು. ಪೌಷ್ಟಿಕ ಆಹಾರದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಮತಿ ಅನ್ನಪೂರ್ಣ, ಜಯಲಕ್ಷ್ಮಿ ಹಿರಿಯ ಮೇಲ್ವಿಚಾರಕರು, ಕಾಳಪ್ಪ ಕುಂಬಾರ, ಚೆನ್ನಮ್ಮ ಹಿರಿಯ ಮೇಲ್ವಿಚಾರಕರು, ಪೂರ್ಣಿಮಾ, ಶೃತಿ, ಬಸಮ್ಮ, ವಲಯ ಮೇಲ್ವಿಚಾರಕಿ ಮಂಜುಳಾ ಗುಗ್ರಿ, ಮಾಧವಿ ವೈದ್ಯ, ಲಲಿತಾ ನಾಯಕ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
ವರದಿ ಚನ್ನಯ್ಯ ಹಿರೇಮಠ ಕುಕನೂರು




