
ಶಿಕ್ಷಣಕ್ಕೆ ಆದ್ಯತೆ, ಸ್ವಚ್ಛತೆಗೆ ನಿರ್ಲಕ್ಷ್ಯವೇ? ವಿದ್ಯಾನಂದ ಗುರುಕುಲದ ಶೌಚಾಲಯಗಳ ದುಸ್ಥಿತಿ ಬಯಲು

ವಿದ್ಯಾನಂದ ಗುರುಕುಲದಲ್ಲಿ ಶೌಚಾಲಯಗಳ ದುಸ್ಥಿತಿ; ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆಯೇ ಆಡಳಿತ ಮಂಡಳಿ?

ಶಿಕ್ಷಣದ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡುವವರಿಗೆ ಮಕ್ಕಳ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಬೇಡವೇ? ಶಿಕ್ಷಣ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳುವುದೇ?

ಕುಕನೂರು: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಾದ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನಿಷ್ಠ ಮೂಲಭೂತ ಸೌಕರ್ಯವಾದ ಸ್ವಚ್ಛ ಶೌಚಾಲಯದ ವ್ಯವಸ್ಥೆಯೂ ಸಮರ್ಪಕವಾಗಿಲ್ಲದಿರುವುದು ದುರದೃಷ್ಟಕರ. ಕುಕನೂರು ಪಟ್ಟಣದ ವಿದ್ಯಾನಂದ ಗುರುಕುಲ ಸಂಯುಕ್ತ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿದ್ಯಾನಂದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಶೌಚಾಲಯಗಳ ದುಸ್ಥಿತಿ ಸಾರ್ವಜನಿಕರ ಗಮನ ಸೆಳೆದಿದ್ದು, ಸಂಸ್ಥೆಯ ಸ್ವಚ್ಛತಾ ನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಶಾಲಾ ಆವರಣದಲ್ಲಿರುವ ಶೌಚಾಲಯಗಳ ಒಳಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಸಕಡ್ಡಿ, ಒಣಗಿದ ಎಲೆಗಳು ಮತ್ತು ಕೊಳಕು ತುಂಬಿಕೊಂಡಿರುವುದರಿಂದ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಶೌಚಾಲಯಗಳಿಂದ ದುರ್ವಾಸನೆ ಹರಡುತ್ತಿದ್ದು, ವಿದ್ಯಾರ್ಥಿಗಳು ನಿತ್ಯ ಬಳಕೆಗೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಕಂಡುಬರುತ್ತಿದೆ.
ಮಕ್ಕಳಿಗೆ ಪಾಠ ಹೇಳುವುದಷ್ಟೇ ಶಿಕ್ಷಣ ಸಂಸ್ಥೆಯ ಜವಾಬ್ದಾರಿಯೇ? ಅವರ ಆರೋಗ್ಯದ ಬಗ್ಗೆ ಕಾಳಜಿ ಬೇಡವೇ? ಎಂಬ ಪ್ರಶ್ನೆ ಇದೀಗ ಪೋಷಕರು ಹಾಗೂ ಸಾರ್ವಜನಿಕ ವಲಯದಲ್ಲಿ ಮೂಡಿದೆ. ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ಸಂಸ್ಥೆಯಲ್ಲಿ ಶೌಚಾಲಯಗಳ ನಿರ್ವಹಣೆಗೆ ಅಗತ್ಯ ಸಿಬ್ಬಂದಿ, ಸ್ವಚ್ಛತಾ ಕ್ರಮ ಹಾಗೂ ಮೇಲ್ವಿಚಾರಣೆ ಇಲ್ಲದಿರುವುದು ಆಡಳಿತ ಮಂಡಳಿಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನಕ್ಕೆ ಕಾರಣವಾಗಿದೆ.
ಸ್ವಚ್ಛತೆಯ ಕೊರತೆಯಿಂದ ಸೊಳ್ಳೆ, ನೊಣಗಳು ಹಾಗೂ ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿದ್ದು, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕವಿದೆ. ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸುವ ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷಿತ ಹಾಗೂ ಸ್ವಚ್ಛ ವಾತಾವರಣ ದೊರೆಯುತ್ತಿದೆ ಎಂದು ನಿರೀಕ್ಷಿಸುತ್ತಾರೆ. ಆದರೆ ಶೌಚಾಲಯಗಳ ಇಂತಹ ದುಸ್ಥಿತಿ ಕಂಡುಬಂದರೆ ಪೋಷಕರ ವಿಶ್ವಾಸಕ್ಕೆ ಧಕ್ಕೆಯಾಗುವುದಿಲ್ಲವೇ?
ಶಿಕ್ಷಣ ಸಂಸ್ಥೆ ಎಂದರೆ ಕೇವಲ ಕಟ್ಟಡ, ತರಗತಿ ಕೊಠಡಿ ಮತ್ತು ಪಠ್ಯಪುಸ್ತಕಗಳಷ್ಟೇ ಅಲ್ಲ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಮತ್ತು ಆರೋಗ್ಯಕರ ಪರಿಸರ ಒದಗಿಸುವುದು ಕೂಡ ಶಿಕ್ಷಣ ಸಂಸ್ಥೆಯ ಮೂಲಭೂತ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯಿಂದ ಆಡಳಿತ ಮಂಡಳಿ ನುಣುಚಿಕೊಳ್ಳಲು ಸಾಧ್ಯವಿಲ್ಲ.
ಶಿಕ್ಷಣ ಇಲಾಖೆ ಇನ್ನೂ ಮೌನವಾಗಿರುವುದೇಕೆ?
ವಿದ್ಯಾನಂದ ಗುರುಕುಲದ ವಿವಿಧ ವಿಭಾಗಗಳ ಶೌಚಾಲಯಗಳ ನಿರ್ವಹಣೆಯ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಕ್ಷಣ ಗಮನಹರಿಸಬೇಕು. ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಬೇಕು. ಶೌಚಾಲಯಗಳ ಸ್ವಚ್ಛತೆ, ನಿರ್ವಹಣೆ ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಮೂಲಭೂತ ಸೌಕರ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು. ಲೋಪಗಳು ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಂಡು, ತಕ್ಷಣ ಸ್ವಚ್ಛತಾ ವ್ಯವಸ್ಥೆ ಕಲ್ಪಿಸುವಂತೆ ಆಡಳಿತ ಮಂಡಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.
ಮಕ್ಕಳ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯಕ್ಕೆ ಯಾವುದೇ ಕ್ಷಮೆಯಿಲ್ಲ. ಅಧಿಕಾರಿಗಳ ಪರಿಶೀಲನೆ ಕೇವಲ ಕಡತಗಳಿಗೆ ಸೀಮಿತವಾಗದೆ, ಶಾಲಾ ಆವರಣದಲ್ಲಿ ನೈಜ ಬದಲಾವಣೆ ತರುವಂತಾಗಬೇಕು. ಆಡಳಿತ ಮಂಡಳಿ ಇನ್ನಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ಸ್ವಚ್ಛ, ಸುರಕ್ಷಿತ ಶೌಚಾಲಯ ವ್ಯವಸ್ಥೆ ಕಲ್ಪಿಸುತ್ತದೆಯೇ? ಅಥವಾ ಅಧಿಕಾರಿಗಳ ಭೇಟಿಗಾಗಿ ಕಾಯುತ್ತಲೇ ಸಮಸ್ಯೆಯನ್ನು ನಿರ್ಲಕ್ಷಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.

ಆಡಳಿತ ಮಂಡಳಿ ಕಾರ್ಯದರ್ಶಿಯ ಸ್ಪಷ್ಟನೆ
ವಿದ್ಯಾನಂದ ಗುರುಕುಲದ ಶೌಚಾಲಯಗಳ ದುಸ್ಥಿತಿಯ ಕುರಿತು ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀನಿವಾಸ ದೇಸಾಯಿ ಅವರನ್ನು ವಿಚಾರಿಸಿದಾಗ, ಶೌಚಾಲಯಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ಸಮರ್ಪಕ ನಿರ್ವಹಣೆ ಮಾಡಲು ಸಾಧ್ಯವಾಗಿಲ್ಲ. ಮುಂದಿನ ನಾಲ್ಕೈದು ದಿನಗಳಲ್ಲಿ ಶೌಚಾಲಯಗಳ ಸ್ವಚ್ಛತೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆದರೆ ನೀರಿನ ಅಭಾವವೇ ಶೌಚಾಲಯಗಳ ಸ್ವಚ್ಛತೆ ಕಾಪಾಡದಿರಲು ಕಾರಣವಾಗಬೇಕೇ? ನೀರಿನ ಸಮಸ್ಯೆ ಎದುರಾದಾಗ ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಆಡಳಿತ ಮಂಡಳಿಯ ಜವಾಬ್ದಾರಿಯಲ್ಲವೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ನಾಲ್ಕೈದು ದಿನಗಳಲ್ಲಿ ಶೌಚಾಲಯಗಳ ನಿರ್ವಹಣೆ ಮಾಡುವುದಾಗಿ ಕಾರ್ಯದರ್ಶಿಗಳು ಭರವಸೆ ನೀಡಿದ್ದು, ಈ ಭರವಸೆ ಕಾರ್ಯರೂಪಕ್ಕೆ ಬರುತ್ತದೆಯೇ ಅಥವಾ ಕೇವಲ ಭರವಸೆಯಾಗಿಯೇ ಉಳಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ವರದಿ ಚನ್ನಯ್ಯ ಹಿರೇಮಠ ಕುಕನೂರು




