ಬೆಂಗಳೂರು: ವಿಜಯನಗರವನ್ನು ನೂತನ ಜಿಲ್ಲೆಯಾಗಿ ಘೋಷಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅಧಿಕೃತ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.
ವಿಜಯನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿದ್ಯುಕ್ತವಾಗಿ ಘೋಷಣೆಯಾಗಲಿದೆ.
ಎಸ್ಸಿ- ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿ, ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗುತ್ತದೆ. ಒಂದು ವಾರದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ವರದಿ ಆಧರಿಸಿ ಮೀಸಲು ಹೆಚ್ಚಳ ಮಾಡಲಾಗುತ್ತದೆ ಎಂದರು.
follow me